ಬೆಂಗಳೂರು; ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಎಫ್ ಐಆರ್ ಹಿನ್ನೆಲೆ ಉಪ್ಪಾರಪೇಟೆ ಪೊಲೀಸ್ ಉಪ ನಿರೀಕ್ಷಕರಿಗೆ ಚಂದ್ರಶೇಖರನಾಥ ಸ್ವಾಮೀಜಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಕಾರಣ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವೈದ್ಯರು ಹತ್ತು ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಗುಣಮುಖರಾದಲ್ಲಿ ಡಿ. 18 ರಂದು ವಿಚಾರಣೆಗೆ ಹಾಜರಾಗುತ್ತೇವೆ. ತನಿಖಾಧಿಕಾರಿಗಳೇ ಮಠಕ್ಕೆ ಬಂದು ಹೇಳಿಕೆ ಪಡೆಯಲು ಅಭ್ಯಂತರ ಇಲ್ಲ. ಈಗಾಗಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಲಾಗಿದೆ.ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಪ್ರಕರ ಬೆಳೆಸದೇ ಇಲ್ಲಿಗೇ ಮುಕ್ತಾಯಗೊಳಿಸಬೇಕೆಂದು ಮನವಿ ಮಾಡುತ್ತೇನೆ ಎಂದು ತನಿಖಾಧಿಕಾರಿಗೆ ಬರೆದ ಪತ್ರದಲ್ಲಿ ಚಂದ್ರಶೇಖರನಾಥ ಸ್ವಾಮೀಜಿ ಉಲ್ಲೇಖ ಮಾಡಿದ್ದಾರೆ.
ಇಂದು ತನಿಖೆಗೆ ಹಾಜರಾಗುವಂತೆ ಸ್ವಾಮೀಜಿಗೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟೀಸ್ ನೀಡಿದ್ದರು. ಇನ್ನು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್ ಐಆರ್ ಹಿನ್ನೆಲೆ ಸ್ವಾಮೀಜಿ ಭೇಟಿಗಾಗಿ ಮಠಕ್ಕೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ಶಾಸಕ ಡಾ. ಅಶ್ವಥ್ ನಾರಾಯಣ. ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡಾ ಸಾಥ್ ನೀಡಿದ್ದಾರೆ.
ಇನ್ನು ಚಂದ್ರಶೇಖರ್ ಸ್ವಾಮೀಜಿಗಳ ವಿರುದ್ಧ ದೂರು ದಾಖಲು ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಮಾಜಿ ಸಂಸದ ಡಿ ಕೆ ಸುರೇಶ್ ಈಗಾಗಲೇ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದ್ದಾರೆ. ಭಾರತ ಸಂವಿಧಾನ ಎಲ್ಲರಿಗೂ ಒಂದೇ, ಪೂಜ್ಯರು ಸ್ಪಷ್ಟ ಪಡಿಸಿದ್ದಾರೆ. ಸ್ವಾಮೀಜಿಗಳು ಸಾಂದರ್ಭಿಕವಾಗಿ ಆ ಮಾತು ಆಡಿದ್ದೇನೆ ಎಂದಿದ್ದಾರೆ. ಆದರೆ, ಸರ್ಕಾರ ದೂರನ್ನು ದಾಖಲು ಮಾಡಿದೆ.ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ ಸ್ವಾಮೀಜಿಗಳು ವಿಷಾಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ ಕೂಡಲೇ ಪ್ರಕರಣ ವಾಪಸ್ ಪಡೆದುಕೊಳ್ಳಬೇಕು.ಸರ್ಕಾರಕ್ಕೆ ನಾನು ಈ ಮೂಲಕ ಮನವಿ ಮಾಡುತ್ತೇನೆ ಎಂದಿದ್ದಾರೆ.











