ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಇಂದಿಗೆ ಆರು ವರ್ಷಗಳನ್ನು ಪೂರೈಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂದು ಹೇಳಿರುವ ಸಿದ್ದರಾಮಯ್ಯ, ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಎಂದಿದ್ದಾರೆ.
ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ.. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ ಎಂದೂ ಎಕ್ಸ್ ಪೋಸ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.











