ಬೆಂಗಳೂರು; ಹೊಸ ವರ್ಷಾಚರಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಗೃಹ ಇಲಾಖೆ, ಅಬಕಾರಿ ಇಲಾಖೆ, ಜಿಬಿಎ ಅಧಿಕಾರಿಗಳು ಸೇರಿ ಹಲವರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ ನೀಡಿದರು. ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದರು.
ಅಧಿಕಾರಿಗಳಿಗೆ ಸಭೆಯಲ್ಲಿ ಸಿಎಂ ನೀಡಿದ ಸೂಚನೆಗಳು
*ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು
*ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು
*ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು
*ಮಹಾತ್ಮಾ ಗಾಂಧಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟೀಟ್, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು
*ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು
*ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ
*ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು.ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು
* ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್, 55 ಆಂಬ್ಯುಲೆನ್ಸ್ ಗಳ ವ್ಯವಸ್ಥೆ ಮಾಡಲಾಗಿದೆ
* ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಲಾಗಿದೆ
* ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು
* ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು
* ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.
ಇನ್ನು ಇದೇ ವೇಳೆ ನಿನ್ನೆಯ ಸಭೆಯ ತೀರ್ಮಾನಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದರು. ಬೆಂಗಳೂರು ರೂಟ್ ಮ್ಯಾಪ್ ಅಳವಡಿಸಿ ಸಿಎಂಗೆ ಅಧಿಕಾರಿಗಳು ಮಾಹಿತಿ ನೀಡಿದರು. 20,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ 14,000 ಕಾನೂನು ಸುವ್ಯವಸ್ಥೆ ಮತ್ತು 2,500 ಸಂಚಾರ ನಿರ್ವಹಣೆ ಸಿಬ್ಬಂದಿ ಸೇರಿದ್ದಾರೆ.ಪಬ್, ಬಾರ್, ಮತ್ತು ರೆಸ್ಟೋರೆಂಟ್‌ಗಳಲ್ಲಿ ಮದ್ಯದ ಸರಬರಾಜು ಮತ್ತು ಸಂಭ್ರಮಾಚರಣೆಗೆ ಸಮಯ ನಿಗದಿಯಾಗಿದೆ. ರಾತ್ರಿ ಒಂದು ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಅಹಿತಕರ ಘಟನೆಗಳ ಆಗುವುದನ್ನ ತಡೆಯಲು ಹೊಸ ತಂತ್ರಜ್ಜಾನ ಬಳಕೆ ಮಾಡಲಾಗಿದೆ. ಹೀಟ್ ಮ್ಯಾಪ್ ವ್ಯವಸ್ಥೆ, ಡ್ರೋನ್ ಮತ್ತು AI ಕ್ಯಾಮೆರಾಗಳ ಬಳಕೆ ಮಾಡಲಾಗಿದೆ. 8 ಕೇಂದ್ರಗಳಲ್ಲಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಮಹಿಳಾ ಸುರಕ್ಷತಾ ಶೆಲ್ಟರ್ಸ್, ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಸಂಭ್ರಮಾಚರಣೆ ನಡೆಯುವ ಸ್ಥಳಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚನೆ ನೀಡಲಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಮೇಲೆ ನಿಗಾ ಇಡಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ ಕಳೆದ 5 ದಿನಗಳಲ್ಲಿ 2,854 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ ಮತ್ತು ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳಲ್ಲಿ ಅತಿ ಹೆಚ್ಚಿನ ಜನದಟ್ಟಣೆ ನಿರೀಕ್ಷೆಯಿದೆಯ. ಅಲ್ಲಿ ವಿಶೇಷ ನಿಗಾ ವಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಇಲಾಖೆಯ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.











