ಕೇಂದ್ರ ರಸಗೊಬ್ಬರ ಸಚಿವ ಜೆಪಿ ನಡ್ಡಾಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ರಸಗೊಬ್ಬರ ಕೊರತೆ ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯಕ್ಕೆ ಹಂಚಿಕೆಯಾದ ರಸಗೊಬ್ಬರ ಪ್ರಮಾಣವನ್ನು ಪೂರೈಸುವಂತೆ ಸಿಎಂ ಆಗ್ರಹಿಸಿದ್ದಾರೆ. ಭಾರತ ಸರ್ಕಾರವು 2025 ರ ಖಾರಿಫ್‌ಗೆ ಕರ್ನಾಟಕಕ್ಕೆ 11,17,000 ಮೆಟ್ರಿಕ್ ಟನ್ ಯೂರಿಯಾವನ್ನು ಹಂಚಿಕೆ ಮಾಡಿದೆ. ಅದರಲ್ಲಿ ಇಲ್ಲಿಯವರೆಗೆ ಸರಬರಾಜು ಮಾಡಲಾದ ಪ್ರಮಾಣ ಕೇವಲ 5,16,959 ಮೆಟ್ರಿಕ್ ಟನ್ ಮಾತ್ರ. ಆದರೆ ಏಪ್ರಿಲ್ ನಿಂದ ಜುಲೈ ವರೆಗೆ ರಾಜ್ಯದ ಯೂರಿಯಾದ ಅವಶ್ಯಕತೆ 6,80,655 ಮೆಟ್ರಿಕ್ ಟನ್. ಕೆಲವು ರಸಗೊಬ್ಬರ ಕಂಪನಿಗಳು ಭಾರತ ಸರ್ಕಾರ ಮಾಡಿದ ಹಂಚಿಕೆಯ ಪ್ರಕಾರ ಯೂರಿಯಾ ಗೊಬ್ಬರವನ್ನು ಪೂರೈಸಲು ತಮ್ಮ ಅಸಮರ್ಥತೆಯನ್ನು ವ್ಯಕ್ತಪಡಿಸಿವೆ ಎಂದಿದ್ದಾರೆ.
ರಾಜ್ಯದಲ್ಲಿ ಯೂರಿಯಾ ಪೂರೈಕೆಯ ತುರ್ತು ಅವಶ್ಯಕತೆಯಿದೆ. ರಾಜ್ಯಕ್ಕೆ ಈ ವರ್ಷದ ಆರಂಭದಲ್ಲಿಯೇ ಮಾನ್ಸೂನ್ ಬಂದಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಿವಿಧ ಬೆಳೆಗಳ ವ್ಯಾಪ್ತಿಯು ಹೆಚ್ಚಾಗಿದೆ. ತುಂಗಭದ್ರಾ, ಕಾವೇರಿ ಮತ್ತು ಕೃಷ್ಣಾ ನದಿಗಳ ಆಯಕಟ್ಟಿನ ಪ್ರದೇಶಗಳಲ್ಲಿ ನೀರನ್ನು ಮೊದಲೇ ಬಿಡುಗಡೆ ಮಾಡಲಾಗಿದೆ. ಮುಂಗಾರು ಆರಂಭಿಕ ಬಿತ್ತನೆ ಚಟುವಟಿಕೆ ಆರಂಭವಾಗಿದೆ. ಹೆಚ್ಚಿನ ಗೊಬ್ಬರ ಬಳಸುವ ಬೆಳೆಯಾದ ಮೆಕ್ಕೆಜೋಳದ ವಿಸ್ತೀರ್ಣವು ಸುಮಾರು 2 ಲಕ್ಷ ಹೆಕ್ಟೇರ್‌ಗಳಷ್ಟು ಹೆಚ್ಚಾಗಿದೆ. ದ್ವಿದಳ ಧಾನ್ಯಗಳ ವಿಸ್ತೀರ್ಣವು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಿಮೆಯಾಗಿದೆ. ಸುಮಾರು 13,000 ಹೆಕ್ಟೇರ್ ಖಾರಿಫ್ ಪೂರ್ವ ಪ್ರದೇಶದಲ್ಲಿ ಮತ್ತೆ ಬಿತ್ತನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮೇಲಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ. ಯೂರಿಯಾ ಕೊರತೆಯು ರೈತರಲ್ಲಿ ಅಶಾಂತಿ ಆತಂಕವನ್ನು ಸೃಷ್ಟಿಸುತ್ತಿದೆ. ರೈತರ ಹಿತದೃಷ್ಟಿಯಿಂದ ರಾಜ್ಯ ಹಂಚಿಕೆಯ ಪ್ರಕಾರ ರಸಗೊಬ್ಬರ ಪೂರೈಕೆ ಮಾಡಿ. ಬಾಕಿ ಕೊರತೆ ಇರುವ 1,65,541 ಮೆಟ್ರಿಕ್ ಟನ್ ಯೂರಿಯಾದ ಪೂರೈಕೆಯನ್ನು ತ್ವರಿತಗೊಳಿಸಿ. ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ನಾನು ವಿನಂತಿಸುತ್ತೇನೆ ಎಂದು ಜೆ ಪಿ ನಡ್ಡಾಗೆ ಸಿಎಂ ಸಿದ್ದರಾಮಯ್ಯ ಸುದೀರ್ಘ ಪತ್ರ ಬರೆದಿದ್ದಾರೆ.