ಮನೆ Latest News ಅತಿವೃಷ್ಟಿ ಹಾಗೂ ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಿವಿಧ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಅತಿವೃಷ್ಟಿ ಹಾಗೂ ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಿವಿಧ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

0

ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಿವಿಧ ಪ್ರದೇಶಗಳಿಗೆ ಹಾಗೂ ಕಾಳಜಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ  ಇಂದು ಭೇಟಿ ಪರಿಶೀಲಿಸಿದರು.

ಅತಿವೃಷ್ಟಿಯಿಂದಾಗಿ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಳಿಕ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ‌ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿದರು.

ನಂತರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಈ ವೇಳೆ ಅಲ್ಲಿದ್ದ ಸಂತ್ರಸ್ತ ಮಹಿಳೆಯರು ಕೈ ಮುಗಿದು ನಮಗೆ ಪರಿಹಾರ ಕೊಡಿ, ಮನೆ ಕಟ್ಟಿಸಿ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರ ಬಳಿ ಬೇಡಿಕೊಂಡರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರೂ ಆದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ. ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ತಿಳಿಸಿದರು.