ಬೆಂಗಳೂರು; ಸಿಎಂ ಪ್ರಾಸಿಕ್ಯೂಷನ್ ವಿರೋಧಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇನ್ನು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಪ್ರಶ್ನಿಸಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ಹಮ್ಮಿಗೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡುತ್ತಿದ್ದಾಗಲೇ ಕಾಂಗ್ರೆಸ್ ಕಾರ್ಯಕರ್ತ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಸಂಘದ ಸದಸ್ಯ ಸಿ.ಕೆ.ರವಿಚಂದ್ರನ್ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಸಿ ಕೆ ರವಿಚಂದ್ರನ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಅಲ್ಲೇ ಸಮೀಪದಲ್ಲಿ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಆಸ್ಪತ್ರೆ ತಲುವಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇನ್ನು ಕೆ ಸಿ ರವಿಚಂದ್ರನ್ ಸಾವಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು. ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದಿದ್ದಾರೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಾಟ; ಮೂಲರು ಕಾಂಗ್ರೆಸ್ ಕಾರ್ಯಕರ್ತರ ಬಂಧನ
ಇನ್ನು ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಪ್ರಶ್ನಿಸಿ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಈ ವೇಳೆ ಉದ್ರಿಕ್ತರಾದ ಪ್ರತಿಭಟನಾ ನಿರತರು ಖಾಸಗಿ ಬಸ್ ನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಬಸ್ ನಲ್ಲಿ 10 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಮಹಿಳೆಯೊಬ್ಬರಿಗೆ ಗಾಯಗಳಾಗಿದ್ದು, ಬಸ್ ನ ಗಾಜು ಪುಡಿ ಪುಡಿಯಾಗಿದೆ.
ಘಟನೆ ಸಂಬಧಿಸಿದಂತೆ ಮೂವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಪಾಲಿಕೆ ನಾಮ ನಿರ್ದೇಶಿತ ಸದಸ್ಯ ಕಿಶೋರ್ ಶೆಟ್ಟಿ, ಕಾಂಗ್ರೆಸ್ ಕಾರ್ಯಕರ್ತರಾದ ಶಾಹುಲ್ ಹಮೀದ್ ಹಾಗೂ ಅನ್ವರ್ ಎಂಬ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪಾಲಿಕೆ ಕಚೇರಿ ಬಳಿ ಘಟನೆ ನಡೆದಿದ್ದು, ಸದ್ಯ ಘಟನೆ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಹೈಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ಅರ್ಜಿ
ಬೆಂಗಳೂರು; ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಹೈ ಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಪರ ಹೈಕೋರ್ಟ್ ಗೆ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಅವರು ಅರ್ಜಿಯನ್ನು ಸಲ್ಲಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ವಾದ ಮಂಡಿಸಿದ ಸಿಎಂ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ,ರಾಜ್ಯಪಾಲರು ಸರಿಯಾಗಿ ಪರಿಶೀಲನೆ ನಡೆಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ವಾದ ಮಂಡಿಸಿದರು.ಇನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರ ಪರವಾಗಿ ವಕೀಲ ತುಷಾರ್ ಮೆಹ್ತಾ ಅವರು ಮಂಡಿಸಿದರು.ಈ ವೇಳೆ ತುಷಾರ್ ಮೆಹ್ತಾ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಬೇಕು ಎಂದು ಮನವಿ ಮಾಡಿದರು. ಆಗ ಮಧ್ಯ ಪ್ರವೇಶಿಸಿದ ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಗ್ವಿ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ಇದೆ. ಮಧ್ಯಂತರ ಆದೇಶ ಬೇಕಿರುವುದರಿಂದ ಇಂದೇ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು. ರಾಜ್ಯಪಾಲರ ಕಚೇರಿಗೆ ಅರ್ಜಿಯ ಪ್ರತಿ ನೀಡಲಾಗಿದೆ ನಿಜ. ಹಾಗಂದ ಮಾತ್ರಕ್ಕೆ ಅವರ ವಾದ ಕೇಳಬೇಕಿಲ್ಲ ಎಂದು ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.