ವಿಜಯನಗರದಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ನ ಚೈನ್ ಕಟ್ಟಾದ ಪರಿಣಾಮ ಗೇಟ್ ಮೂಲಕ ಅಪಾರ ಪ್ರಮಾಣದ ನೀರು, ನದಿ ಪಾತ್ರಕ್ಕೆ ಹರಿದು ಅವಾಂತರ ಸೃಷ್ಟಿಯಾಗಿದೆ. ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ನ ಚೈನ್ ಕಟ್ಟಾಗಿದೆ. ಇದರಿಂದಾಗಿ ನದಿ ಪಾತ್ರದ ಜನರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರೋದರಿಂದ ಅಪಾರ ಪ್ರಮಾಣದ ನೀರು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿದೆ.
ಜಲ ಸಂಪನ್ಮೂಲ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿಜಯನಗರದ ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ತೆರಳಿ ಕ್ರೆಸ್ಟ್ ಗೇಟ್ ಚೈನ್ ಲಿಂಕ್ ತುಂಡಾಗಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಘಟನೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಬೋಸರಾಜ್, ಸಂಸದ ತುಕಾರಾಂ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಗವಿಯಪ್ಪ, ಮಾಜಿ ಸಚಿವ ಆನಂದ್ ಸಿಂಗ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಮಂಗಳವಾರ ಜಲಾಶಯಕ್ಕೆ ಭೇಟಿ ಸಿಎಂ ಸಿದ್ದರಾಮಯ್ಯ ಭೇಟಿ
ಇನ್ನು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.
ಮೈದುಂಬಿ ಹರಿಯುತ್ತಿರುವ ಭದ್ರಾ ಜಲಾಶಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಬಾಗಿನ ಅರ್ಪಣೆ ಮಾಡಿ, ಗಂಗಾಪೂಜೆಯ ಸಮಾರಂಭವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪ, ಭದ್ರಾವತಿಯ ಶಾಸಕ ಬಿ. ಕೆ. ಸಂಗಮೇಶ್, ಸರ್ವಧರ್ಮಗಳ ಗುರುಗಳು, ತರೀಕೆರೆ ಶಾಸಕ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಸೇರಿದಂತೆ ಭ್ರದ್ರಾವತಿ ಮತ್ತು ತರೀಕೆರೆ ಭಾಗದ ವಿವಿಧ ಜನ ಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಈ ಭಾಗದ ರೈತರು ಭಾಗವಹಿಸಿದ್ದರು.










