ಬೆಂಗಳೂರು: ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾಗಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಆರೋಪಿಗಳಾಗಿದ್ದ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಕೊಲೆ ಪ್ರಕರಣದ 19ನೇ ಆರೋಪಿಗೆ ಏಳು ವರ್ಷಗಳ ಕಾಲ ಶಿಕ್ಷೆ ವಿಧಿಸಲ್ಪಟ್ಟಿದ್ದು, ಕೊಲೆಯಾದ ಯೋಗೇಶ್ ಗೌಡ ಮಕ್ಕಳಿಗೆ ಹಾಗೂ ಸಹೋದರನಿಗೆ 16 ಲಕ್ಷ ರೂಪಾಯಿಗಳನ್ನು ಪಾವತಿಸುವಂತೆ ಕೋರ್ಟ್ ಆದೇಶಿಸಿದೆ.
ಇನ್ನು ಏಪ್ರಿಲ್ 15ರಂದು ವಿನಯ್ ಕುಲಕರ್ಣಿ, ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಚನ್ನಕೇಶವ ಟಿಂಗರೀಕರ್ ಸೇರಿದಂತೆ 17 ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ದೋಷಿಗಳೆಂದು ಘೋಷಿಸಿ ಮಹತ್ವದ ತೀರ್ಪು ನೀಡಿತ್ತು. ಗುರುವಾರವಾರಕ್ಕೆಶಿಕ್ಷೆಯ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲವು ಸಿಬಿಐ ಮತ್ತು ಆರೋಪಿಗಳ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿತು. ಇದೇ ವೇಳೆ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಆರೋಪಿಗಳ ಪರ ವಕೀಲರು ವಾದ ಮಂಡಿಸಿದ್ದರೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು. ಬಳಿಕ ಇಂದಿಗೆ ಅಂದರೆ ಏಪ್ರಿಲ್ 17ಕ್ಕೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಪ್ರಕರಣದ 15ನೇ ಅಪರಾಧಿಯಾಗಿರುವ ಪ್ರಭಾವಿ ರಾಜಕಾರಣಿ ವಿನಯ್ ಕುಲಕರ್ಣಿ ಹತ್ಯೆಯ ಹಿಂದೆ ನಡೆದ ಒಳಸಂಚಿನಲ್ಲಿ ಭಾಗಿಯಾದ ಹಿನ್ನೆಲೆ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ಉಳಿದ ಆರೋಪಿಗಳಿಗೂ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
2016ರ ಜೂನ್ 16 ರಂದು ಧಾರವಾಡ ಜಿಲ್ಲಾ ಪಂಚಾಯತ್ ನ ಹೆಬ್ಬಳ್ಳಿ ಕ್ಷೇತ್ರದ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು ಬೆಳಗ್ಗೆ ಜಿಮ್ ನಲ್ಲಿ ಕೊಲೆ ಮಾಡಲಾಗಿತ್ತು. ಸುಮಾರು 8 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಸಂಜೆ ಅಂತಿಮ ತೀರ್ಪು ಪ್ರಕಟಿಸಿ ಅಪರಾಧಿಗಳೆಂದು ಘೋಷಿಸಿತ್ತು. ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದಾಗಲಿದ್ದು, ಧಾರವಾಡ ವಿಧಾನಸಭಾ ಕ್ಷೇತ್ರ ತೆರವಾಗಲಿದೆ.











