ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದ್ದು, ಬಂಧನದ ಭೀತಿಯೂ ಕಾಡುವಂತಾಗಿದೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದ್ದು, ಪ್ರಕರಣದ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್. ನಾಯಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಈ ಮಧ್ಯೆ ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ದೂರು ನೀಡಿರುವ ಮಹಿಳೆಗೆ ದೂರು ನೀಡುವುದೇ ಅಭ್ಯಾಸವಾಗಿದ್ದು, ತಾವು ಯಾವುದೇ ಕಾನೂನು ಬಾಹಿರವಾದಂತಹ ಕೃತ್ಯವನ್ನು ಎಸಗಿಲ್ಲವಾಗಿರುವುದರಿಂದ ಮತ್ತು ದೂರಿನಲ್ಲಿ ಅಪರಾಧದ ಅಂಶಗಳು ಇಲ್ಲದೇ ಇರುವುದರಿಂದ ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.
ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ ಸಿಐಡಿ ಪೊಲೀಸರು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು, ಗುರುವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಆದರೆ ಪೂರ್ವ ನಿಗದಿತವಾಗಿರುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುತ್ತಿರುವ ಕಾರಣ ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ಯಡಿಯೂರಪ್ಪ ಸಿಐಡಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಇದರ ಜೊತೆಯಲ್ಲೇ, ಯಡಿಯೂರಪ್ಪ ಅವರನ್ನು ಪ್ರಕರಣದಲ್ಲಿ ಬಂಧಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಘಟನೆ ನಡೆದು ಕೆಲವು ತಿಂಗಳುಗಳು ಕಳೆದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ, ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ ಮತ್ತು ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ವೈ ಮನೆಯ ಸಿಸಿ ಟಿವಿ ದೃಶ್ಯಾವಳಿಯನ್ನೂ ಈವರೆಗೆ ವಶಕ್ಕೆ ಪಡೆದಿಲ್ಲ ಎಂದು ಅರ್ಜಿ ಸಲ್ಲಿಸಿರುವ ಸಂತ್ರಸ್ಥೆಯ ಸಹೋದರ, ದೂರು ನೀಡಿದ್ದ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದು, ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲವಾದ್ದರಿಂದ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲಿ ಭೇಟಿಗೆ ತೆರಳಿದ್ದ ಸಂದರ್ಭದಲ್ಲಿ ತಮ್ಮ ಪುತ್ರಿಯೊಂದಿಗೆ ಯಡಿಯೂರಪ್ಪ ಅನುಚಿತವಾಗಿ ನಡೆದುಕೊಂಡಿದ್ದರು ಎಂದು ಸಂತ್ರಸ್ಥೆಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದಡಿ ಎಫ್ ಐಆರ್ ದಾಖಲಾಗಿತ್ತಲ್ಲದೇ ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು