ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಬೆಂಗಳೂರಿನಲ್ಲಿ ಪೋಕ್ಸೋ ವಿಶೇಷ ಕೋರ್ಟ್ ಗೆ ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು 750 ಪುಟಗಳ ಆರೋಪ ಪಟ್ಟಿಯನ್ನು ಪೋಕ್ಸೋ ವಿಶೇಷ ಕೋರ್ಟ್ ಗೆ ಸಲ್ಲಿಸಿದ್ದಾರೆ.
ಇನ್ನು ಜೂನ್ 14, 2024 ರಂದು ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೋರ್ಟ್ ಜಾಮೀನು ನೀಡಿತ್ತು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ ಜಾಮೀನು ನೀಡಿತ್ತು. ಯಡಿಯೂರಪ್ಪ ಅವರನ್ನು ಬಂಧನ ಮಾಡದಂತೆ ನ್ಯಾಯಾಲಯ ಸೂಚಿಸಿತ್ತು. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆಯೂ ನ್ಯಾಯಾಲಯ ಯಡಿಯೂರಪ್ಪ ಅವರಿಗೆ ನಿರ್ದೇಶನ ನೀಡಿತ್ತು.ಅದರಂತೆ ಜೂನ್ 17 ರಂದು ಬಿ ಎಸ್ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿದ್ದರು.
ಏನಿದು ಪ್ರಕರಣ?
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಮಾರ್ಚ್ ತಿಂಗಳಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಬಾಲಕಿಯ ತಾಯಿ ಈ ದೂರನ್ನು ದಾಖಲಿಸಿದ್ದರು. ಕೇವಲ ಬಿಎಸ್ವೈ ಮಾತ್ರವಲ್ಲದೇ ಸಂತ್ರಸ್ತೆಯ ತಾಯಿ ಒಟ್ಟು 53 ಮಂದಿ ವಿರುದ್ಧ ದೂರು ದಾಖಲಿಸಿದ್ದರು. ಅದರಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದ್ದರು..ಇದೀಗ ಇದೇ ಪ್ರಕರಣ ಬಿಎಸ್ವೈ ಪಾಲಿಗೆ ಕಂಟಕವಾಗಿದೆ.
ಇನ್ನು ಬೆಂಗಳೂರನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲಿ ಯಡಿಯೂರಪ್ಪ ಭೇಟಿಗೆ ತೆರಳಿದ್ದ ಸಂದರ್ಭದಲ್ಲಿ ತಮ್ಮ ಪುತ್ರಿಯೊಂದಿಗೆ ಯಡಿಯೂರಪ್ಪ ಅನುಚಿತವಾಗಿ ನಡೆದುಕೊಂಡಿದ್ದರು ಎಂದು ಸಂತ್ರಸ್ಥೆಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದಡಿ ಎಫ್ ಐಆರ್ ದಾಖಲಾಗಿತ್ತಲ್ಲದೇ ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಇದೀಗ ತನಿಖೆ ನಡೆಸಿದ ಸಿಐಡಿ ತಂಡ 750 ಪುಟಗಳ ಜಾರ್ಜ್ ಶೀಟ್ ನ್ನು ಕೋರ್ಟ್ ಗೆ ಸಲ್ಲಿಕೆ ಮಾಡಿದೆ.