ಮನೆ ಪ್ರಸ್ತುತ ವಿದ್ಯಮಾನ ರಾಜ್ಯದ ಹಲವೆಡೆ ವರುಣ ಆರ್ಭಟ; ದಕ್ಷಿಣಕನ್ನಡ, ಕೊಡಗು ಜಿಲ್ಲೆಗಳಲ್ಲಿ ನಾಳೆ ಶಾಲೆಗಳಿಗೆ ರಜೆ

ರಾಜ್ಯದ ಹಲವೆಡೆ ವರುಣ ಆರ್ಭಟ; ದಕ್ಷಿಣಕನ್ನಡ, ಕೊಡಗು ಜಿಲ್ಲೆಗಳಲ್ಲಿ ನಾಳೆ ಶಾಲೆಗಳಿಗೆ ರಜೆ

0

ಮಂಗಳೂರು/ ಕೊಡಗು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟ ಜೋರಾಗಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣಕನ್ನಡ ಹಾಗೂ ಕೊಡಗು ಜಿಲ್ಲೆಯ ಜನ ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಹೊರಗೆ ಬರೋದಕ್ಕೂ ಜನ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ಕೊಡಗು ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇನ್ನು ಹವಾಮಾನ ಇಲಾಖೆ ನಾಳೆ ಕೊಡಗಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಹಾಗಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ಘೋಷಣೆ ಮಾಡಲಾಗಿದೆ.

ಬಿಇಓ ರಜೆ ಘೋಷಣೆಯ ಆದೇಶ ಹೊರಡಿಸಿದ್ದು, ನಾಳೆ ವಿರಾಜಪೇಟೆ,. ಪೊನ್ನಂಪೇಟೆ ತಾಲೂಕಿನಲ್ಲಿ ಭಾರೀ ಮಳೆಯಾಗುವ ಸಂಭವವಿರೋದರಿಂದ ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ,

ದಕ್ಷಿಣಕನ್ನಡ ಜಿಲ್ಲೆಯಲ್ಲೂ ನಾಳೆ ಶಾಲೆಗಳಿಗೆ ರಜೆ

ಇನ್ನು ಕರಾವಳಿಯಲ್ಲೂ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇರೋದರಿಂದ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ‌ಮುಗಿಲನ್ ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ದಿನಾಂಕ: 27-06-2024 ರಂದು ರಜೆಯನ್ನು ಘೋಷಿಸಲಾಗಿದೆ.ಳಿಗೆ

ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಸಮೀಪ ಹೋಗದಂತೆ ಎಚ್ಚರಿಕೆವಹಿಸುವುದು.

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು. ಈ ಎಲ್ಲ ಸೂಚನೆಗಳನ್ನು ಆದೇಶದಲ್ಲಿ ನೀಡಲಾಗಿದ್ದು ಅದನ್ನು ಪಾಲಿಸುವಂತೆ ತಿಳಿಸಲಾಗಿದೆ